ಮಂಗಳೂರು : 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕರಾವಳಿ ಉತ್ಸವ ಮೈದಾನದಲ್ಲಿ ಇಂದು(ನ.16) ಅದ್ದೂರಿಯಾಗಿ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ , ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್ ಗಳು, ಸೌಹಾರ್ದ ಸಹಕಾರ ಸಂಘಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವುದು’ ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಸಹಕಾರ ಸಪ್ತಾಹವನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಿದರು.

ಬಳಿಕ ಅವರು ಮಾತನಾಡಿ, ಸಹಕಾರ ಕ್ಷೇತ್ರವು ಶಕ್ತಿ ಇಲ್ಲದವರಿಗೆ ಶಕ್ತಿ ಹಾಗೂ ಧ್ವನಿ ಇಲ್ಲದವರಿಗೆ ಧ್ವನಿ ಆಗಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ರಂಗವು ಈ ದಿಶೆಯಲ್ಲಿ ಶ್ಲಾಘನೀಯ ಕೆಲಸ ಮಾಡಿದೆ. ಕರಾವಳಿ ಭಾಗದ ಸಾಕಷ್ಟು ಮಂದಿ ಮಹಿಳೆಯರು ಸ್ವ- ಸಹಾಯ ಸಂಘಗಳ ಮೂಲಕ ಸ್ವಾವಲಂಬಿಗಳಾಗಿದ್ದಾರೆ. ಅವರಲ್ಲಿ ಆತ್ಮವಿಶ್ವಾಸ ತುಂಬಿದೆ. ಶಿಕ್ಷಣ ಮತ್ತು ಇತರ ಕೆಲವು ಕ್ಷೇತ್ರಗಳಿಗೆ ಸಾಲ ಸೌಲಭ್ಯ ನೀಡಲು ವಾಣಿಜ್ಯ ಬ್ಯಾಂಕುಗಳು ಹಿಂದೇಟು ಹಾಕಿದಾಗ ಸಹಕಾರಿ ಬ್ಯಾಂಕು ಮುಂದೆ ಬಂದು ಸಾಲ ಒದಗಿಸಿ ಸಹಕರಿಸಿದೆ ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಗಾರ್ಮೆಂಟ್ ಫ್ಯಾಕ್ಟರಿಯನ್ನು ಆರಂಭಿಸಿ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮುಂದಾಗಲಿ ಎಂದು ಸಲಹೆ ಮಾಡಿದರು.
ವಸ್ತು ಪ್ರದರ್ಶನ ಮಳಿಗೆ ಜಿ.ಟಿ. ದೇವೇಗೌಡ ಉದ್ಘಾಟನೆ :

ಸಪ್ತಾಹದ ಅಂಗವಾಗಿ ಏರ್ಪಡಿಸಿದ್ದ ವಸ್ತು ಪ್ರದರ್ಶನ ಮಳಿಗೆಗಳನ್ನು ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ಸಹಕಾರಿ ಕ್ಷೇತ್ರವನ್ನು ಭದ್ರವಾಗಿ ಉಳಿಸಿದ ಕೀರ್ತಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಸಲ್ಲುತ್ತದೆ. ಇಲ್ಲಿ ಸಹಕಾರಿ ತತ್ವಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ನಡೆಯುತ್ತಿದೆ. ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಂತಹ ಚುರುಕು ಮತಿಯ ಜನರಿಂದಾಗಿ ಇದು ಸಾಧ್ಯವಾಗಿದೆ ಎಂದು ಹೇಳಿದರು.
ಹಳ್ಳಿ ಹಳ್ಳಿಗಳಿಗೆ ಹೋಗಿ ಸೇವೆ : ಎಂ.ಎನ್.ಆರ್

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ। ಎಂ.ಎನ್.ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಬ್ಯಾಂಕುಗಳ ತವರೂರು. ವಿಪರ್ಯಾಸವೆಂದರೆ ಜಿಲ್ಲೆಯಲ್ಲಿ ಹುಟ್ಟಿದ ವಾಣಿಜ್ಯ ಬ್ಯಾಂಕುಗಳು ವಿಲೀನಗೊಂಡು ನೆಲೆ ಕಳೆದುಕೊಳ್ಳುತ್ತಿವೆ. ಆದರೆ, ಸಹಕಾರಿ ಬ್ಯಾಂಕುಗಳು ಹಳ್ಳಿ ಹಳ್ಳಿಗಳಿಗೆ ಹೋಗಿ ಸೇವೆ ಒದಗಿಸುತ್ತಿವೆ. ವಾಣಿಜ್ಯ ಬ್ಯಾಂಕುಗಳಿಗೆ ಮಹಿಳೆಯರು ಹೋದರೆ ವರ್ಷ ಕಳೆದರೂ ಸಾಲ ಸಿಗುತ್ತಿಲ್ಲ. ಆದರೆ ಸಹಕಾರಿ ಬ್ಯಾಂಕುಗಳಿಗೆ ಹೋದರೆ ಅರ್ಧ ದಿನದ ಒಳಗೆ ಸಾಲ ಕೊಡುವ ವ್ಯವಸ್ಥೆ ನಮ್ಮಲ್ಲಿದೆ. ಹಾಗಾಗಿ ಸಹಕಾರಿ ಸಂಸ್ಥೆಗಳು ಜನರ ವಿಶ್ವಾಸಕ್ಕೆ ಪಾತ್ರವಾಗಿವೆ ಎಂದರು.
ಪ್ರಶಸ್ತಿ ಪ್ರದಾನ :

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಸಹಕಾರಿ ಸಂಸ್ಥೆಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ, ಎರಡು ಉತ್ತಮ ಸಹಕಾರಿ ಸಂಸ್ಥೆಗಳಿಗೆ ಮತ್ತು ಮಹಿಳಾ ಸಹಕಾರಿ ಬ್ಯಾಂಕುಗಳಿಗೆ ಪ್ರಶಸ್ತಿ ವಿತರಣೆ, ನಂದಿನಿಯ ಎರಡು ಹೊಸ ಉತ್ಪನ್ನಗಳ ಬಿಡುಗಡೆ, ಸಹಕಾರ ಶಿಕ್ಷಣ ನಿಧಿಯ ಅರ್ಪಣೆ, ಸ್ಮರಣ ಸಂಚಿಕೆ ಮತ್ತು ಸಹಕಾರಿ ಪತ್ರಿಕೆ ಬಿಡುಗಡೆ ನೆರವೇರಿತು.

ಇದನ್ನೂ ಓದಿ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ : ಆಕರ್ಷಕ ಮೆರವಣಿಗೆ
ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ ಭಂಡಾರಿ ಮತ್ತು ಐವನ್ ಡಿ’ಸೋಜಾ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ನಬಾರ್ಡ್ ಜನರಲ್ ಮ್ಯಾನೇಜರ್ ಡಾ. ಸುರೇಂದ್ರ ಬಾಬು, ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕ ಟಿ.ಎಚ್.ಎಂ. ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು, ವ್ಯವಸ್ಥಾಪಕ ನಿರ್ದೇಶಕ ಲಿಂಗರಾಜ್, ಸಹಕಾರ ಸಂಘಗಳ ಜಂಟಿ ನಿಬಂಧಕ ಮೈಸೂರು ಪ್ರಾಂತ್ಯದ ಪ್ರಸಾದ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲೆಯ ಉಪ ನಿಬಂಧಕ ರಮೇಶ್ ಎಚ್.ಎನ್., ಉಡುಪಿ ಜಿಲ್ಲೆಯ ಉಪ ನಿಬಂಧಕರಾದ ಲಾವಣ್ಯ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಟ್ರಸ್ಟ್ ನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪೂರ್ಣಿಮಾ ಶೆಟ್ಟಿ ಮತ್ತು ಇತರರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.